Aru badukidarayya Bhajan Lyrics in Kannada

ಆರು ಬದುಕಿದರಯ್ಯ ಹರಿ ನಿನ್ನ ನಂಬಿ
ತೋರು ಈ ಜಗದೊಳಗೆ ಒಬ್ಬರನು ಕಾಣೆ || pa ||

ಕರಪತ್ರದಿಂದ ತಾಮ್ರಧ್ವಜನ ತಂದೆಯ
ಕೊರಳ ಕೊಯಿಸಿದೆ ನೀನು ಕುಂದಿಲ್ಲದೆ |
ಮರುಳನಂದದಿ ಪೋಗಿ ಭೃಗುಮುನಿಯ ಕಣ್ಣೊಡೆದೆ
ಅರಿತು ತ್ರಿಪುರಾಸುರನ ಹೆಂಡಿರನು ಬೆರೆದೆ || 1 ||

ಕಲಹ ಬಾರದ ಮುನ್ನ ಕರ್ಣನನು ನೀ ಕೊಂದೆ
ಸುಲಭದಲಿ ಕೌರವರ ಮನೆಯ ಮುರಿದೆ |
ನೆಲವ ಬೇಡುತ ಹೋಗಿ ಬಲಿಯ ತನುವನು ತುಳಿದೆ
ಮೊಲೆಯನುಣಿಸಲು ಬಂದ ಪೂತನಿಯ ಕೊಂದೆ || 2 ||

ತಿರಿದುಂಬ ದಾಸರ ಕೈಲಿ ಕಪ್ಪವ ಕೊಂಬೆ
ಗರುಡವಾಹನ ನಿನ್ನ ಚರಿಯವರಿಯೆ |
ದೊರೆ ಪುರಂದರವಿಠಲ ನಿನ್ನನ್ನು ನಂಬಿದರೆ
ತಿರುಪೆಯೂ ಹುಟ್ಟಲೊಲ್ಲದು ಕೇಳೊ ಹರಿಯೆ|| 3 ||